Kalyanarajya

ಗಂಗಾವತಿ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಸೇವೆ ಆರೋಪ; ಕೆಆರ್‌ಎಸ್ ಪಕ್ಷದಿಂದ ಪರಿಶೀಲನೆಗೆ ಆಗ್ರಹ

ಗಂಗಾವತಿ: ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ಸಮರ್ಪಕ ಹಾಗೂ ಗುಣಮಟ್ಟದ ಸೇವೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮುಖಂಡರು ಆಗ್ರಹಿಸಿದ್ದಾರೆ. 

ಗಂಗಾವತಿ ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿ ಹಾಗೂ ರುಚಿಕರವಾದ ಆಹಾರ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ನಿರಂತರವಾಗಿ ದೂರು ನೀಡುತ್ತಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ಮುಖಂಡರು ತಿಳಿಸಿದ್ದಾರೆ.

ಅಲ್ಲದೆ, ಕ್ಯಾಂಟೀನ್‌ನಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ನಿಗದಿತ ಸಮಯಕ್ಕೆ ಉಪಹಾರ, ಊಟ ಮತ್ತು ತಿಂಡಿ ವಿತರಣೆ ಮಾಡುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಡವರು, ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆಯಾಗದಂತೆ ಆಹಾರದ ಗುಣಮಟ್ಟ, ಶುಚಿತ್ವ ಹಾಗೂ ಸಮಯ ಪಾಲನೆಗೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೆಆರ್‌ಎಸ್ ಪಕ್ಷ ಒತ್ತಾಯಿಸಿದೆ.

ಈ ಹಿನ್ನೆಲೆಯಲ್ಲಿ ಪೌರಾಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‌ಗೆ ಸ್ಥಳ ಪರಿಶೀಲನೆ ನಡೆಸಬೇಕು. ಆಹಾರದ ಗುಣಮಟ್ಟ, ಶುಚಿತ್ವ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನಿಗದಿತ ಸಮಯಕ್ಕೆ ಊಟ ಮತ್ತು ತಿಂಡಿ ವಿತರಣೆ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಪರಿಶೀಲನೆಯ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಲೋಪಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಉತ್ತಮ ಮತ್ತು ಸಮರ್ಪಕ ಸೇವೆ ದೊರೆಯುವಂತೆ ಕ್ರಮ ವಹಿಸಬೇಕು ಎಂದು ಕೆಆರ್‌ಎಸ್ ಪಕ್ಷ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ಶಾಮೀದ್ ಅಲಿ ಹುಲಿಹೈದರ್, ಸಂಘಟನೆ ಕಾರ್ಯದರ್ಶಿ ಮೈಬೂಸಾಬ್, ಪ್ರಧಾನ ಕಾರ್ಯದರ್ಶಿ ವೀರೇಶ್ ಎಂ., ರೈತ ಘಟಕದ ಕಾರ್ಯದರ್ಶಿ ಹುಡೆಜಾಲಿ ಕನಕಪ್ಪ, ಕೊಪ್ಪಳ ಜಿಲ್ಲಾ ಅಧ್ಯಕ್ಷ ಅಮೃತ ಗಣೇಶ್, ಗಂಗಾವತಿ ತಾಲೂಕು ಕಾರ್ಯದರ್ಶಿ ಮುದಿಯಪ್ಪ, ಖಾಜಾಸಾಬ್, ಜಿಲ್ಲಾ ಮುಖಂಡರಾದ ಮೈನುದ್ದೀನ್ ಹಾಗೂ ಗಣೇಶ್, ಕಾರಟಗಿ ತಾಲೂಕು ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪವನ್ ಸೇರಿದಂತೆ ಪಕ್ಷದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

Previous Post Next Post